23/12/2024

Law Guide Kannada

Online Guide

ಚೆಕ್ ಬೌನ್ಸ್ ಪ್ರಕರಣ – ಹೈ ಕೋರ್ಟ್ ಮಹತ್ವದ ತೀರ್ಪು

ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿ ಗೈರು ಹಾಜರಿದ್ದಾಗ ಎಕ್ಸ್ ಪಾರ್ಟಿ ಮಾಡಿ ವಿಚಾರಣೆ ಮುಂದುವರೆಸಲು, ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಹಾಗೆಯೇ, ಆರೋಪಿಗೆ ಸಮನ್ಸ್ ಜಾರಿ ಮಾಡಿದ ನಂತರವೂ ಗೈರು ಹಾಜರಾದರೆ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಾಧ್ಯವಿರುವ ಇನ್ನಿತರೆ ಕ್ರಮಗಳನ್ನು ಕೈಗೊಳ್ಳಬೇಕು. ಬದಲಿಗೆ ಎಕ್ಸ್ ಪಾರ್ಟಿ ಮಾಡಿ ಕಾನೂನು ಪ್ರಕ್ರಿಯೆಗಳನ್ನು
ಮುಂದುವರೆಸಬಾರದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ತೀರ್ಪಿನ ವಿವರ

ಚೆಕ್ ಬೌನ್ಸ್ ಕೇಸ್ ನಲ್ಲಿ ಉಡುಪಿಯ ಜೆ.ಎಂ.ಎಫ್.ಸಿ ನ್ಯಾಯಾಲಯ ತಮಗೆ ವಿಧಿಸಿರುವ ಶಿಕ್ಷೆ ಹಾಗೂ ಅದನ್ನು ಎತ್ತಿ ಹಿಡಿದಿರುವ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶ ರದ್ದು ಕೋರಿ ಶಿವಮೊಗ್ಗದ ಅಬ್ದುಲ್ ಎಂಬುವರು ಸಲ್ಲಿಸಿದ್ದ ಕ್ರಿಮಿನಲ್ ರಿವಿಷನ್ ಪಿಟಿಷನ್ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ ಈ ಮಹತ್ವದ ತೀರ್ಪು ನೀಡಿದೆ. ಪೀಠ ತನ್ನ ತೀರ್ಪಿನಲ್ಲಿ, ಜೆ.ಎಂ.ಎಫ್.ಸಿ ಕೋರ್ಟ್ ಕಾನೂನು ಪ್ರಕ್ರಿಯೆಗಳನ್ನು ಪಾಲಿಸದೇ ಅರ್ಜಿದಾರರಿಗೆ ಶಿಕ್ಷೆ ವಿಧಿಸಿದೆ. ಈ ಆದೇಶವನ್ನು ಸೆಷನ್ಸ್ ಕೋರ್ಟ್ ಕೂಡ ಸರಿಯಾಗಿ ಪರಿಶೀಲಿಸದೇ ಪುರಸ್ಕರಿಸಿದೆ. ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಗಳನ್ನು ಕೈಬಿಡಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಕೂಡ ಅರ್ಥೈಸಿಕೊಳ್ಳುವಲ್ಲಿ ವಿಚಾರಣಾ ನ್ಯಾಯಾಲಯಗಳು ವಿಫಲವಾಗಿವೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಅಲ್ಲದೇ, ಸಿ.ಆರ್.ಪಿ.ಸಿ ಸೆಕ್ಷನ್ 299 ರ ಸಂದರ್ಭಗಳ ಹೊರತಾಗಿ ಸೆಕ್ಷನ್ 273 ರ ಪ್ರಕಾರ ಆರೋಪಿ ಎದುರಲ್ಲೇ ವಿಚಾರಣಾ ಪ್ರಕ್ರಿಯೆ ನಡೆಯಬೇಕೆಂದು ಸ್ಪಷ್ಟವಾಗಿ ಹೇಳಲಾಗಿದೆ. ಆರೋಪಿಯ ಅಥವಾ ಆರೋಪಿ ಪರ ವಕೀಲರ ಗೈರು ಹಾಜರಿಯಲ್ಲಿ ಸಾಕ್ಷ್ಯಗಳನ್ನು ದಾಖಲಿಸಲು ಅವಕಾಶವಿಲ್ಲ. ಈ ಪ್ರಕರಣದಲ್ಲಿ ಆರೋಪಿ ಗೈರು ಹಾಜರಾಗಿದ್ದಾರೆ. ಅವರನ್ನು ನ್ಯಾಯಾಯದ ಮುಂದೆ ಹಾಜರುಪಡಿಸುವಂತಹ ಯಾವುದೇ ಕ್ರಮಗಳನ್ನು ವಿಚಾರಣಾ ನ್ಯಾಯಾಲಯ ಕೈಗೊಂಡಂತೆ ಕಾಣುವುದಿಲ್ಲ. ಸುಪ್ರೀಂಕೋರ್ಟ್ ತೀರ್ಪುಗಳನ್ನು ಕೂಡ ಸರಿಯಾಗಿ ಅರ್ಥೈಸಿಕೊಂಡಿಲ್ಲ. ಕಾನೂನು ಪ್ರಕ್ರಿಯೆಗಳನ್ನು ಕೈಬಿಟ್ಟು ಅರ್ಜಿದಾರರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿರುವ ವಿಚಾರಣಾ ನ್ಯಾಯಾಯಗಳ ಕ್ರಮ ನಿಯಮ ಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ

ಉಡುಪಿಯ ಮೊಹಮ್ಮದ್ ಇಟ್ಬಾಲ್ ಎಂಬುವರು ಶಿವಮೊಗ್ಗದ ಆಗುಂಬೆಯ ಅಬ್ದುಲ್ ಎಂಬುವರ ವಿರುದ್ಧ 6 ಚೆಕ್ ಬೌನ್ಸ್ ಕೇಸ್ ಗಳನ್ನು ದಾಖಲಿಸಿದ್ದರು. ಈ ಪ್ರಕರಣಗಳ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ ಸಿವಿಲ್ ಅಂಡ್ ಜೆಎಂಎಫ್ ಕೋರ್ಟ್ ಆರೋಪಿ ಗೈರು ಹಾಜರಿಯಲ್ಲಿ ವಿಚಾರಣೆ ಮುಗಿಸಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪುರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ ಹೆಗ್ಡೆ ವಾದ ಮಂಡಿಸಿದ್ದರು.

ಲಾಗೈಡ್ ವರದಿ

Copyright © All rights reserved. | Newsphere by AF themes.