23/12/2024

Law Guide Kannada

Online Guide

ಆಕ್ಷೇಪಾರ್ಹ ಹೇಳಿಕೆ ಕುರಿತು ನ್ಯಾ. ಶ್ರೀಶಾನಂದರಿಂದ ಕ್ಷಮಾಪಣೆ: ವಿಚಾರಣೆ ಮುಕ್ತಾಯಗೊಳಿಸಿದ ಸುಪ್ರೀಂ

ನವದೆಹಲಿ: ‘ವಕೀಲರು ಹಾಗೂ ನ್ಯಾಯಮೂರ್ತಿಗಳು ತಮ್ಮ ವೈಯಕ್ತಿಕ ಪೂರ್ವಾಗ್ರಹಗಳನ್ನು ವಿಚಾರಣೆ ಸಂದರ್ಭದಲ್ಲಿ ತೋರ್ಪಡಿಸಬಾರದು. ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎನ್ನಬಾರದು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು, ವಿ.ಶ್ರೀಶಾನಂದ ಅವರು ತಮ್ಮ ಹೇಳಿಕೆಗಳಿಗೆ ಕ್ಷಮೆಯಾಚಿಸಿದ್ದಾರೆ ಎಂಬ ಅಂಶ ಗಮನಿಸಿತು.

ಇದೇ ವೇಳೆ ನ್ಯಾಯಮೂರ್ತಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ‘ವಕೀಲರು ಹಾಗೂ ನ್ಯಾಯಮೂರ್ತಿಗಳು ತಮ್ಮ ವೈಯಕ್ತಿಕ ಪೂರ್ವಾಗ್ರಹಗಳನ್ನು ವಿಚಾರಣೆ ಸಂದರ್ಭದಲ್ಲಿ ತೋರ್ಪಡಿಸಬಾರದು. ನ್ಯಾಯಮೂರ್ತಿಗಳು ಸ್ತ್ರೀದ್ವೇಷ ಹರಡುವ ಹಾಗೂ ಯಾವುದೇ ಸಮುದಾಯದ ಬಗ್ಗೆ ಪೂರ್ವಗ್ರಹ ಪೀಡಿತ ಹೇಳಿಕೆಗಳನ್ನು ನೀಡಬಾರದು, ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎನ್ನಬಾರದು. ನ್ಯಾಯಮೂರ್ತಿಗಳು ಅಭಿಪ್ರಾಯ ವ್ಯಕ್ತಪಡಿಸುವಾಗ ಅಂಕೆಯಲ್ಲಿರಬೇಕು. ಸಾಮಾಜಿಕ ಜಾಲತಾಣದ ಈ ಯುಗದಲ್ಲಿ ಇಂತಹ ಹೇಳಿಕೆಗಳು ವೇಗವಾಗಿ ಹರಡುತ್ತವೆ’ ಎಂದು ಹೇಳಿತು.

ಪ್ರಕರಣದ ವಿವರ..
ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ ಅವರು, ‘ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನ ದಂತಿದೆ’ ಎಂದು ಹೇಳಿದ್ದರು. ಅಲ್ಲದೆ ವಕೀಲೆಯೊಬ್ಬರಿಗೆ, ‘ನಿಮ್ಮ ಪ್ರತಿವಾದಿ ಯಾವ ಬಣ್ಣದ ಒಳ ಉಡುಪು ಧರಿಸಿದ್ದಾರೆ ಎಂಬುದನ್ನೂ ನೀವು ಹೇಳಬಲ್ಲಷ್ಟು ಅವರನ್ನು ಅರಿತಿದ್ದೀರಿ’ ಎಂದು ವ್ಯಂಗ್ಯವಾಡಿದ್ದರು. ಈ ಮೌಖಿಕ ಹೇಳಿಕೆಗಳ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದರ ವಿಡಿಯೊ ತುಣುಕನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದ ಸುಪ್ರೀಂ ಕೋರ್ಟ್ ಹಿರಿಯ ವಕೀಲೆ ಇಂದಿರಾ ಜೈಸಿಂಗ್, ‘ಈ ನ್ಯಾಯಮೂರ್ತಿಗೆ ಲಿಂಗ ಸಂವೇದನಾ ತರಬೇತಿ ನೀಡುವ ಅಗತ್ಯವಿದೆ’ ಎಂದು ಟೀಕಿಸಿದ್ದರು.

ಇದಾದ ಬಳಿಕ ತಮ್ಮ ಹೇಳಿಕೆಗೆ ನ್ಯಾ. ಶ್ರೀಶಾನಂದ ವಿಷಾದ ವ್ಯಕ್ತಪಡಿಸಿದ್ದರು. ‘ನನ್ನ ಆಕ್ಷೇಪಾರ್ಹ ಹೇಳಿಕೆಗಳು ಯಾರಿಗಾದರೂ ನೋವುಂಟು ಮಾಡಿದ್ದರೆ ಅದಕ್ಕಾಗಿ ಪ್ರಾಮಾಣಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ’ ಎಂದು ಹೇಳಿದ್ದರು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.