ಕೇಂದ್ರದ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಿಸಲು ಅಃI ರಾಜ್ಯಗಳ ಅನುಮತಿ ಪಡೆಯಬೇಕೆ..? ಸುಪ್ರೀಂ ಕೊಟ್ಟ ಮಹತ್ವದ ತೀರ್ಪಿದು…
ನವದೆಹಲಿ: ಕೇಂದ್ರದ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಿಸಲು ಅಃI ರಾಜ್ಯಗಳ ಅನುಮತಿ ಪಡೆಯಬೇಕೆ..? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನ ನೀಡಿದೆ.
ಭ್ರಷ್ಟಾಚಾರದ ಆರೋಪ ಸಂಬಂಧ ಆಂಧ್ರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ ಹೈಕೋರ್ಟ್ ಆದೇಶವನ್ನೇ ಈಗ ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.
ಹಾಗೆಯೇ ವಿವಿಧ ರಾಜ್ಯಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐಗೆ ರಾಜ್ಯ ಸರ್ಕಾರಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಗಂಭೀರ ಆರೋಪವನ್ನು ಎದುರಿಸುತ್ತಿರುವಾಗ ಅವರು ಯಾವ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದು ಮುಖ್ಯವಾಗುವುದಿಲ್ಲ ಎಂದು ನ್ಯಾಯಮೂರ್ತಿ ಸಿಟಿ ರವಿಕುಮಾರ್ ಮತ್ತು ರಾಜೇಶ್ ಬಿಂದಲ್ ಅವರಿದ್ದ ನ್ಯಾಯಪೀಠ ಹೇಳಿದೆ.
ಪ್ರಕರಣದ ವಿವರ?
ಆಂಧ್ರಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರ ಸರ್ಕಾರಿ ನೌಕರರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿತ್ತು .
ಆಂಧ್ರ ಪ್ರದೇಶ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ಅನುಮತಿ ಪಡೆಯದೆ ಸಿಬಿಐ ಎಫ್ಐಆರ್ ದಾಖಲಿಸುವ ಅಧಿಕಾರ ಪ್ರಶ್ನಿಸಿ ಕೇಂದ್ರ ನೌಕರರು ಆಂಧ್ರಪ್ರದೇಶ ಹೈಕೋರ್ಟ್ ಮೊರೆ ಹೋಗಿದ್ದರು.
1946ರ ಡೆಲ್ಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ ಪ್ರಕಾರ, ಅವಿಭಜಿತ ಆಂಧ್ರಪ್ರದೇಶ ವ್ಯಾಪ್ತಿಯಲ್ಲಿದ್ದ ನೌಕರರ ಮೇಲೆ ಸಿಬಿಐ ರಾಜ್ಯದ ಅನುಮತಿ ಪಡೆಯದೇ ಪ್ರಕರಣ ದಾಖಲಿಸಿದ್ದು ಸರಿಯಲ್ಲ ಎಂದು ಹೈಕೋರ್ಟ್ ನಲ್ಲಿ ಆರೋಪಿಗಳು ವಾದ ಮಂಡಿಸಿದ್ದರು.
ಆಂಧ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರದ ನೌಕರರ ವಾದ ಪುರಸ್ಕರಿಸಿದ್ದ ಹೈಕೋರ್ಟ್ ಭ್ರಷ್ಟಾಚಾರ ತಡೆ ಕಾಯಿದೆಯಡಿ ದಾಖಲಿಸಿದ ಎಫ್ಐಆರ್ ಅನ್ನು ವಜಾ ಗೊಳಿಸಿತ್ತು. 32 ಪುಟಗಳ ತೀರ್ಪು ಪ್ರಕಟಿಸಿದ ಹೈಕೋರ್ಟ್, ಸಿಬಿಐ ಪ್ರಕರಣದ ದಾಖಲಿಸುವುದಕ್ಕೆ ಮುನ್ನ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕು ಎಂದು ಉಲ್ಲೇಖಿಸಲಾಗಿತ್ತು.
ಆಂಧ್ರ ಪ್ರದೇಶ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಮೊರೆ ಹ಼ೊಗಿತ್ತು.
ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ