08/01/2025

Law Guide Kannada

Online Guide

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುತ್ತಾ..? ಸಿಎಂ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಏನು..?

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದ ಜನರ ಅನುಕೂಲಕ್ಕಾಗಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡಬೇಕೆಂಬ ವಿಚಾರಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ.

ಹೌದು, ಈ ಕುರಿತು ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದ್ದಾರೆ ಮೂಡಬಿದ್ರೆಯ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಅವರು ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಬಗ್ಗೆ ಸದನದಲ್ಲಿ ಮುಖ್ಯಮಂತ್ರಿಗೆ ಲಿಖಿತವಾಗಿ ಪ್ರಶ್ನೆ ಮಾಡಿದ್ದರು. ಶಾಸಕರ ಲಿಖಿತ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಇಂತಹ ಯಾವುದೇ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ ಎಂದು ಹೇಳಿದ್ದರು.

ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಉಡುಪಿ ಮಡಿಕೇರಿ ಉತ್ತರ ಕನ್ನಡ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಜನರ ಅನುಕೂಲಕ್ಕಾಗಿ ಮಂಗಳೂರಿನಲ್ಲಿ ಹೈಕೋರ್ಟ್ ನ್ಯಾಯ ಪೀಠ ಸ್ಥಾಪನೆಗೆ ಕಳೆದ ವರ್ಷದುದ್ದಕ್ಕೂ ಪ್ರತಿಭಟನೆ ಹಾಗೂ ವ್ಯಾಪಕ ಒತ್ತಾಯ, ಬೇಡಿಕೆ ಕೇಳಿ ಬಂದಿತ್ತು.

ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ನೇತೃತ್ವದ ಸರ್ವ ಪಕ್ಷಗಳ ಜನಪ್ರತಿನಿಧಿಗಳು ಮತ್ತು ವಕೀಲರ ನಿಯೋಗ ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಇದೀಗ ಮಂಗಳೂರು ಪೀಠ ಸ್ಥಾಪನೆ ಪ್ರಸ್ತಾವನೆ ಇಲ್ಲ ಎಂದಿದ್ದಾರೆ.

ಮಂಗಳೂರು ವಕೀಲರ ಸಂಘ ಕರಾವಳಿ ಮಲೆನಾಡು ಭಾಗದ ವಿವಿಧ ತಾಲೂಕುಗಳ ವಕೀಲರ ಸಂಘಗಳು ಕೂಡ ಈ ನಿಟ್ಟಿನಲ್ಲಿ ಹಲವು ಪ್ರಯತ್ನಗಳನ್ನು ಮಾಡಿದ್ದರು.

ಸಂಪಾದಕರು
ಲಾಗೈಡ್ ಕನ್ನಡ‌ ಕಾನೂನು ಮಾಸಪತ್ರಿಕೆ

Copyright © All rights reserved. | Newsphere by AF themes.